ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 10 ಭಕ್ತರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದರೆ, ೧೯ ಮಂದಿ ಗಾಯಗೊಂಡಿದ್ದಾರೆ.
ಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೊಲೆರೊ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.